ಸಂತ್ರಸ್ತರಿಗೂ ಪಡಿತರ ವಿತರಣೆ; ಸಿಎಂ ಬೊಮ್ಮಾಯಿ ಸೂಚನೆ!

 

ಮಡಿಕೇರಿ, ಜುಲೈ 12: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ.

ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಳಿಕ ಮುಖ್ಯಮಂತ್ರಿಗಳು ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದ ತೊಂದರೆಗೆ ಒಳಗಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಇತರರು ಉಪಸ್ಥಿತರಿದ್ದರು

ಮುಖ್ಯಮಂತ್ರಿಗಳು ಮಡಿಕೇರಿಯಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಟಾಸ್ಕ್ ಫೋರ್ಸ್ ರಚನೆಗೆ ಸೂಚನೆಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು ಎಂದರು.

ನದಿಪಾತ್ರದಲ್ಲಿನ ಹೂಳು ತೆಗೆಯಲು ಕ್ರಮ

ಕೊಡಗು ಜಿಲ್ಲೆಯ ನಾಲ್ಕು ತಹಶೀಲ್ದಾರ್‌ ಖಾತೆಗಳಲ್ಲಿ ತಲಾ 25 ಲಕ್ಷ ರೂ.ಗಳು ಲಭ್ಯವಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ.ಗಳನ್ನು ಈಗಾಗಲೇ ಒದಗಿಸಲಾಗಿದೆ. ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಹೂಳು ತುಂಬಿದೆ. ಅದರ ಜೊತೆಗೆ ನೀರಿನ ಹರಿವಿನಿಂದ ನೀರು ಹೊರಗೆ ಹರಿಯುತ್ತಿದೆ. ಇದನ್ನು ತಪ್ಪಿಸಲು ಹಾರಂಗಿ ಜಲಾಶಯದ ಹಿಂದಿನ ಪ್ರದೇಶಕ್ಕೆ ಈಗಾಗಲೇ 40 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, ಕೆಲಸ ಕೂಡಲೇ ಪ್ರಾರಂಭವಾಗುತ್ತದೆ. ಹೂಳು, ಮಣ್ಣು ತೆಗೆಯುವುದು ಹಾಗೂ ಗೋಡೆ ನಿರ್ಮಾಣ ಕಾರ್ಯವನ್ನು ಇದು ಒಳಗೊಂಡಿದೆ. ಕಾವೇರಿ ನದಿಯಲ್ಲಿನ ಹೂಳು ತೆಗೆಯಲು ಕಾವೇರಿ ನೀರಾವರಿ ನಿಗಮಕ್ಕೆ ಸೂಚಿಸಲಾಗಿದೆ.

ಮರದ ದಿಮ್ಮಿಗಳ ತೆರವಿಗೆ ಆದೇಶ

ನೀರು ನಿಲ್ಲದಂತೆ ಮಾಡಲು ಕ್ರಮ ಕೈಗೊಳ್ಳಲು ಹಾಗೂ ಮರದ ದಿಮ್ಮಿಗಳನ್ನು ಕೂಡಲೇ ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಳೆದ ಬಾರಿಯ ದಿಮ್ಮಿಗಳು ಹಾಗೆಯೇ ಉಳಿದುಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ನದಿ ಪಾತ್ರದಲ್ಲಿ ಯಾವುದೇ ಮರದ ದಿಮ್ಮಿಗಳು ಇರಬಾರದು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಾಗಿದೆ

ಜುಲೈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಸಣ್ಣ ಪ್ರಮಾಣದ ಭೂಕುಸಿತವಾಗಿ ಸಂಚಾರ ಕಡಿತಗೊಂಡಿದೆ. ಮನೆಗಳು ಹಾನಿಗೊಳಗಾಗಿವೆ. ನದಿ ಪಾತ್ರಗಳು ಉಕ್ಕಿ ಹರಿದು ಅಕ್ಕಪಕ್ಕದಲ್ಲಿರುವ ಜಮೀನುಗಳಿಗೆ ಹಾಗೂ ಮನೆಗಳಿಗೆ ನೀರುನುಗ್ಗಿದೆ. ರಸ್ತೆಗಳು ಹಾನಿಗೊಳಗಾಗಿದ್ದು, ಸೇತುವೆಗಳು ಮಣ್ಣು ಮತ್ತು ಮರದ ದಿಮ್ಮಿಗಳಿಂದ ತುಂಬಿವೆ. ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಇವೆಲ್ಲವನ್ನೂ ಇಂದು ಪರಿಶೀಲಿಸಲಾಗಿದೆ. ಈ ಬಾರಿಯ ಮುಂಗಾರಿನಲ್ಲಿ ವಾರ ಹತ್ತು ದಿನಗಳೊಳಗೆ ಶೇ 114 ಮಳೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾಗಶಃ ಹಾನಿಯಾಗಿರುವ ಮನೆಗೆ 3ಲಕ್ಷ ನೆರವು

ಇದುವರೆಗೂ ಸಂಪೂರ್ಣವಾಗಿ ಹಾನಿಗೊಳಗಿರುವುದು ಎರಡು ಮನೆಗಳು, ತೀವ್ರ ಗತಿಯಲ್ಲಿ ಹಾನಿಯಾಗಿರುವುದು 15 ಮನೆಗಳು, ಭಾಗಶ: ಹಾನಿಗೊಳಗಾಗಿರುವುದು 63 ಮನೆಗಳಿವೆ . ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು, ತೀವ್ರ ಹಾನಿಯಾದ ಮನೆಗಳಿಗೆ 3 ಲಕ್ಷ ರೂ.ಗಳು ಹಾಗೂ ಭಾಗಶ: ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ.ಗಳ ಪರಿಹಾರವನ್ನು ಕೂಡಲೇ ನೀಡಲು ಸೂಚಿಸಲಾಗಿದೆ. ಬಿದ್ದುಹೋಗಿರುವ ಮನೆಗಳಿಗೆ ತುರ್ತು ವ್ಯವಸ್ಥೆಗಾಗಿ ಈಗಾಗಲೇ 10 ಸಾವಿರ ರೂ.ಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ತೋಳಗಳು ನಾಯಿಗಳಂತೆ ಮಲಗುತ್ತವೆ ಎಂದು ನಿಮಗೆ ತಿಳಿದಿದೆಯೇ? ಸಂಶೋಧಕರು ಬಹಿರಂಗಪಡಿಸುತ್ತಾರೆ

Wed Jul 13 , 2022
ಇತ್ತೀಚಿನ ಅಧ್ಯಯನದ ಪ್ರಕಾರ, ಸಂಶೋಧಕರ ಗುಂಪು ನಾಯಿಯ ಕಾಡು ಪ್ರತಿರೂಪವಾದ ತೋಳದ ನಿದ್ರೆಯನ್ನು ಮೊದಲ ಬಾರಿಗೆ ಕಂಡುಹಿಡಿದಿದೆ. ಹಂಗೇರಿಯ Eotvos Lorand ವಿಶ್ವವಿದ್ಯಾಲಯದ ಎಥಾಲಜಿ ವಿಭಾಗದ ಸಂಶೋಧನೆಯ ಸಂಶೋಧನೆಗಳನ್ನು ವೈಜ್ಞಾನಿಕ ವರದಿಗಳಲ್ಲಿ ಪ್ರಕಟಿಸಲಾಗಿದೆ. ಅಧ್ಯಯನದಲ್ಲಿ, ಸಂಪೂರ್ಣ ಆಕ್ರಮಣಶೀಲವಲ್ಲದ EEG ಮಾಪನಗಳನ್ನು ಅನ್ವಯಿಸಲಾಗಿದೆ; ಮಾನವ ನಿದ್ರೆಯ ಇಇಜಿ ವಿಧಾನಗಳಂತೆಯೇ ಚರ್ಮದ ಮೇಲ್ಮೈಯಲ್ಲಿ ವಿದ್ಯುದ್ವಾರಗಳನ್ನು ಜೋಡಿಸುವ ನಿರುಪದ್ರವ ವಿಧಾನ. ದವಡೆ ನಿದ್ರೆಯ ಸಂಶೋಧನೆಯಲ್ಲಿ ಹೆಚ್ಚುತ್ತಿರುವ ಆಸಕ್ತಿಯು ಮಾನವ ಪರಿಸರಕ್ಕೆ ಹೊಂದಿಕೊಳ್ಳುವ ಸಾಕುಪ್ರಾಣಿಗಳ ನಿದ್ರೆಯನ್ನು […]

Advertisement

Wordpress Social Share Plugin powered by Ultimatelysocial