ಸಂಪುಟ ಸರ್ಜರಿಗೆ ವರಿಷ್ಠರಿಂದ ಅಂತಿಮ ಚಿತ್ರಣ,

 

ಬೆಂಗಳೂರು,ಏ.6- ಕಳೆದ ಹಲವು ತಿಂಗಳಿನಿಂದ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ/ವಿಸ್ತರಣೆಗೆ ಇಂದು ಅಂತಿಮ ಚಿತ್ರಣ ಸಿಗುವ ಸಾಧ್ಯತೆಯಿದ್ದು, ಹಾಲಿ ಸಚಿವರಿಗೆ ಎದೆಬಡಿತ ಹೆಚ್ಚಾಗಿದೆ.

ಪದೇ ಪದೇ ಅಧಿಕಾರ ಅನುಭವಿಸಿರುವ ಕೆಲವು ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಆರ್‍ಎಸ್‍ಎಸ್ ಮತ್ತು ಸಂಘಟನೆ ಹಿನ್ನೆಲೆಯುಳ್ಳವರಿಗೆ ಮಣೆ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಸಚಿವರು ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಇದೇ ಕಾರಣಕ್ಕೆ ಕೆಲವು ಸಚಿವರು ದೆಹಲಿಗೆ ತೆರಳಿದ್ದು, ಪಕ್ಷದ ಹೈಕಮಾಂಡ್ ನಾಯಕರ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಕಸರತ್ತು ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.

ಈ ನಿಟ್ಟಿನಲ್ಲಿ ದೆಹಲಿಗೆ ತೆರಳಿರುವ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಇಂದು ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಉನ್ನತ ಮಟ್ಟದ ನಾಯಕರನ್ನು ಬೊಮ್ಮಾಯಿ ಭೇಟಿ ಮಾಡಿ ಸಚಿವ ಸಮಾಲೋಚಿಸುವ ಸಾಧ್ಯತೆಗಳಿವೆ.

ಸಂಪುಟ ಪುನಾರಚನೆ ಆಗಲೇಬೇಕೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಶಾಸಕರಿದ್ದು, ಕೇವಲ ವಿಸ್ತರಣೆಯಾದರೆ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಲು ಸಾಧ್ಯವಾಗುತ್ತದೆ. ಆದರೆ, ಇದರಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ಮತ್ತಷ್ಟು ಸಮಸ್ಯೆ ಮೈಮೇಲೆ ಹಾಕಿಕೊಂಡಂತಾಗುತ್ತದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿದೆ.

ಹೀಗಾಗಿ ಹಾಲಿ ಇರುವ ಕೆಲವು ಹಿರಿಯ ಸಚಿವರನ್ನು ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆಗೆ ಬಳಸಿಕೊಂಡರೆ ಹೊಸಬರಿಗೆ ಅವಕಾಶ ಕೊಟ್ಟಂತಾಗುತ್ತದೆ ಎಂಬ ಲೆಕ್ಕಾಚಾರ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಪುಟ ಪುನಾರಚನೆಯಾದರೆ ಕನಿಷ್ಠ 8ರಿಂದ 10 ಸ್ಥಾನಗಳನ್ನು ಭರ್ತಿ ಮಾಡುವ ಸಾಧ್ಯತೆ ಇದ್ದು, ಚುನಾವಣಾ ವರ್ಷವಾಗಿರುವುದರಿಂದ ಜಾತಿ, ಪ್ರಾದೇಶಿಕತೆಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಹೀಗಾಗಿ ಸಚಿವಾಕಾಂಕ್ಷಿಗಳಲ್ಲಿ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಿದ್ದು, ಬಹುತೇಕರು ತಮ್ಮ ಜಿಲ್ಲೆ, ಜಾತಿ ಹಾಗೂ ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಸಚಿವಾಕಾಂಕ್ಷಿಗಳಾದ ಎಂ.ಪಿ. ರೇಣುಕಾಚಾರ್ಯ, ಬಿ.ವೈ ವಿಜಯೇಂದ್ರ, ಬಸನಗೌಡ ಪಾಟೀಲ್ ಸೇರಿದಂತೆ ಅನೇಕ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಅವರಷ್ಟೇ ಅಲ್ಲದೇ ಸಚಿವರುಗಳು ದೆಹಲಿಗೆ ತೆರಳಿದ್ದು, ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯ ಬಿಜೆಪಿಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಸಂಪುಟ ಪುನಾರಚನೆಯಾದರೆ ತಮ್ಮನ್ನೂ ಪರಿಗಣಿಸಬಹುದು ಎಂಬ ನಿರೀಕ್ಷೆಯಲ್ಲಿ ಪ್ರಮುಖವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ, ವಿಜಯಪುರ ಶಾಸಕ ಬಸನಗೌಡ ಪಾಟೀಲ್, ರಮೇಶ ಜÁರಕಿಹೊಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸುರಪುರ ಶಾಸಕ ರಾಜುಗೌಡ,

ಗುಲಬರ್ಗ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೆಯ ಪಾಟೀಲ್ ರೇವೂರ, ಚಿತ್ರದುರ್ಗದ ತಿಪ್ಪಾರೆಡ್ಡಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಹಿರಿಯೂರು ಶಾಸಕಿ ಆರ್. ಪೂರ್ಣಿಮಾ, ಹಾಸನ ಶಾಸಕ ಪ್ರೀತಂ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೊಸ ವರ್ಷದ ಸಂಭ್ರಮದಲ್ಲಿ ಅದೃಷ್ಠ ಖುಲಾಯಿಸಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇದೀಗ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ!

Wed Apr 6 , 2022
ಬೆಂಗಳೂರು,ಏ.6- ಒಂದು ಕಡೆ ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳ ಮಾಡಲು ಮುಂದಾಗಿದೆ. ಜನರಿಗೆ ಹೆಚ್ಚಿನ ಹೊರೆಯಾಗದಂತೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಪ್ರತಿ ಲೀಟರ್‍ಗೆ 5 ರೂ. ದರ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳು ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿವೆ. ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಂಎಫ್ ಮಂಡಳಿಯ […]

Advertisement

Wordpress Social Share Plugin powered by Ultimatelysocial