ಕದ್ರಿ ಗೋಪಾಲನಾಥ್ ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರು

 

 

ಕದ್ರಿ ಗೋಪಾಲನಾಥರು 1949ರ ಡಿಸೆಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು. ತಾಯಿ ಗಂಗಮ್ಮನವರು.
ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು.
ಕದ್ರಿ ಗೋಪಾಲನಾಥರು ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಸ್ಯಾಕ್ಸಫೋನ್ ವಾದ್ಯದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ನುಡಿಸುವುದನ್ನು ಕಲಿತರು. ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು.
ಮುಂದೆ ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ವಿ. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್, ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಿದ್ದರು.
ಗೋಪಾಲನಾಥರ ಪ್ರಥಮ ಕಾರ್ಯಕ್ರಮ ಮದ್ರಾಸಿನ ಚೆಂಬೈ ಮೆಮೋರಿಯಲ್ ಟ್ರಸ್ಟ್ನಲ್ಲಿ ನಡೆಯಿತು. ಅದು ಅವರಿಗೆ ಎಲ್ಲೆಡೆಯಿಂದ ಪ್ರಸಿದ್ಧಿ ತಂದಿತು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರೆಂದು ಪರಿಗಣಿತರಾದ ಗೋಪಾಲನಾಥರ ಕಚೇರಿಗಳು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿಯೇ ಅಲ್ಲದೆ ಉತ್ತರ ಭಾರತದ ಪ್ರತಿಷ್ಟಿತ ಉತ್ಸವ- ವೇದಿಕೆಗಳಲ್ಲಿ ಜರುಗಿದವು. ಬಿಬಿಸಿಯ ಆಹ್ವಾನದ ಮೇರೆಗೆ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ, ಫ್ರಾಗ್ ಜಾಸ್ ಫೆಸ್ಟಿವಲ್, ಬರ್ಲಿನ್ ಸಂಗೀತೋತ್ಸವ, ಮೆಕ್ಸಿಕೋದ ಸೆರ್ವಾಂಟಿನೊ ಉತ್ಸವ, ಲಂಡನ್‌ನ ಪ್ರೊಮೆನಾಡೊ, ಪ್ಯಾರಿಸ್‌ನ ಹೈಲ್ ಫೆಸ್ಟಿವಲ್ ಮುಂತಾದ ವಿಶ್ವ ಉತ್ಸವ-ವೇದಿಕೆಗಳಲ್ಲಿ ಹೀಗೆ ಕದ್ರಿಯವರ ಸ್ಯಾಕ್ಸೋಫೋನ್ ಎಲ್ಲೆಲ್ಲಿಯೂ ಮೊಳಗಿತು. ಯೂರೋಪ್, ಸ್ವಿಜರ್‌ಲ್ಯಾಂಡ್, ಯುನೈಟೆಡ್ ಕಿಂಗ್ಡಂ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕತಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಹೀಗೆ ಅವರು ವಿಶ್ವದಾದ್ಯಂತ ಯಶಸ್ವಿ ಕಚೇರಿಗಳನ್ನು ನಿರಂತರವಾಗಿ ನಡೆಸಿಕೊಡುತ್ತಾ ಬಂದಿದ್ದರು.
ಕದ್ರಿಯವರ ವಾದನ ಸದಾ ಕಾವಿನಿಂದ ಕೂಡಿರುತ್ತಿತ್ತು. ಅವರ ಕಛೇರಿ ಮೊದಲಿನಿಂದ ಕೊನೆಯವರೆಗೂ ರಂಜನೀಯ; ಸುನಾದದ ಅಲೆ! ಚೇತೋಹಾರಿ ವಿನಿಕೆ. ತನಿಯಾಗಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಕಲಾವಿದರೊಂದಿಗೆ ಜುಗಲ್‌ಬಂದಿ, ಪಾಶ್ಚಾತ್ಯ ವಾದ್ಯಗಳೊಂದಿಗೆ ಜಾಸ್, ಫ್ಯೂಷನ್ ಹೀಗೆ ವೈವಿಧ್ಯಪೂರ್ಣ ಕಾರ್ಯಕ್ರಮಗಳನ್ನು ಅವರು ನೀಡುತ್ತಾ ಬಂದಿದ್ದರು. ಕಚೇರಿಗಳಲ್ಲಷ್ಟೇ ಆಲ್ಲದೆ, ಅನೇಕ ವೈಶಿಷ್ಟ್ಯಪೂರ್ಣ ಆಲ್ಬಂಗಳಲ್ಲಿ ಸಹಾ ಅವರ ಸಂಗೀತ ಶ್ರೋತೃ-ಅಭಿಮಾನಿಗಳನ್ನು ತಣಿಸುತ್ತಿತ್ತು. ಇಂದು ವಿದೇಶಿ ಮೂಲದ ವಾದ್ಯ ಸ್ಯಾಕ್ಸೋಫೋನ್‌ಗೆ ಶಾಸ್ತ್ರೀಯ ಸಂಗೀತದ ವೇದಿಕೆಯ ಮೇಲೆ ಒಂದು ಗೌರವಾನ್ವಿತ ಸ್ಥಾನ ದೊರಕಿರುವುದು ಅವರ ಪ್ರತಿಭೆ, ಪರಿಶ್ರಮಗಳಿಂದಲೇ. ಹಾಗಾಗಿ ಸ್ಯಾಕ್ಸೋಫೋನ್‌ಗೆ ಇನ್ನೊಂದು ಹೆಸರೇ ಕದ್ರಿ ಗೋಪಾಲನಾಥ್.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

ಭೀಮರಾವ್ ರಾಮಜಿ ಅಂಬೇಡ್ಕರ್ ಸಂವಿಧಾನ ಶಿಲ್ಪಿ.

Sat Dec 24 , 2022
    ಅಂಬೇಡ್ಕರ್ 1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಾಹೊವ್ ಗ್ರಾಮದಲ್ಲಿ ಜನಿಸಿದರು. ತಂದೆ ರಾಮಜಿ ಮಾಲೋಜಿ ಸಕ್ಪಾಲ್. ತಾಯಿ ಭೀಮಾಬಾಯಿ. ಈ ದಂಪತಿಗಳಿಗೆ ಅಂಬೇಡ್ಕರ್ ಹದಿನಾಲ್ಕನೆಯ ಸಂತಾನ. ಭೀಮರಾವ್ ಸಕ್ಪಾಲ್ ಅಂಬವಾಡೇಕರ್ ಎಂಬ ಅವರ ವಂಶೀಯ ಹೆಸರು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಅಂಬವಾಡೆ ಎನ್ನುವ ಅವರಿದ್ದ ಹಳ್ಳಿಯನ್ನು ಸೂಚಿಸುತ್ತದೆ. ಅವರನ್ನು ಶಾಲೆಯಲ್ಲಿ ಪ್ರೀತಿಯಿಂದ ಕಂಡ ಮಹದೇವ್ ಅಂಬೇಡ್ಕರ್ ಎಂಬವರು ಅವರ ಹೆಸರನ್ನು ಶಾಲೆಯ ದಾಖಲೆಗಳಲ್ಲಿ ಅಂಬೇಡ್ಕರ್ ಎಂದು ಮೂಡಿಸಿದರು. […]

Advertisement

Wordpress Social Share Plugin powered by Ultimatelysocial